October 5, 2024

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ ? ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಲು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರು ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಐದಕ್ಕೆ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಿಸಿದ ಜಿಲ್ಲೆಯ ಜನತೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ನಿಮಗೆ ಬಿಜೆಪಿ ಸರ್ಕಾರದ ಅಚ್ಛೆ ದಿನಗಳು ಬಂದಿದೆಯಾ ಎಂದು ಪ್ರಶ್ನಿಸಿದರು. ನೆರೆದಿದ್ದ ಜನರು ಇಲ್ಲ ಇಲ್ಲ ಎಂದು ಕೂಗಿದರು.

ಅಭಿವೃದ್ಧಿ ಶೂನ್ಯ ಬಿಜೆಪಿ, ಸುಳ್ಳುಗಳ ಉತ್ಪಾದನೆ ಮಾಡುತ್ತಿದೆ. ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ ಎಂದರು.

ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿಯೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ನಾವು 2013, 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾ, ಅಲ್ವಾ ತಮ್ಮಯ್ಯ ಎಂದು ಚಿಕ್ಕಮಗಳೂರು ಶಾಸಕರನ್ನು ಪ್ರಶ್ನಿಸಿ ಬಿಜೆಪಿಗೆ ತಿವಿದರು.

4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಗಳಿಗೆ ವರ್ಷಕ್ಕೆ 50- 60 ಸಾವಿರ ಉಳಿತಾಯವಾಗುತ್ತಿದೆ. ನಮ್ಮ ಸರ್ಕಾರ ರಚನೆ ಆದ ತಕ್ಷಣ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ತೆಗೆದುಕೊಂಡೆವು. ಮೋದಿ ಅವರು ಕಪ್ಪು ಹಣ ತಂದು ಎಲ್ಲರ ಬ್ಯಾಂಕ್ ಖಾತೆಗೆ 15 ಲಕ್ಷ ಹಣ ಹಾಕುತ್ತೇನೆ ಎಂದು ಹೇಳಿದರು. ಹಣ ಬಂದಿದೆಯೇ? ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಹಣ ನೀಡಿದ್ದೇವೆ. ಅಭಿವೃದ್ದಿ ಯೋಜನೆಗಳಿಗೆ 1 ಲಕ್ಷದ 26 ಸಾವಿರ ಕೋಟಿ ಹಣವನ್ನು ಸಿದ್ದರಾಮಯ್ಯ ಅವರು ನೀಡಿದ್ದಾರೆ. ಅಭಿವೃದ್ಧಿಗೆ ಹಣ ನೀಡಿಲ್ಲ ಎನ್ನುವ ಬಿಜೆಪಿಯವು ನನ್ನ ಬಳಿ ಬರಲಿ, ಎಲ್ಲೆಲ್ಲಿ,ಯಾವ, ಯಾವ ಕೆಲಸಗಳಿಗೆ ಹಣ ನೀಡಿದ್ದೇವೆ ಎಂದು ತೋರಿಸುತ್ತೇನೆ ಎಂದು ತಿಳಿಸಿ, ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಚಿಕ್ಕಮಗಳೂರು ಜಿಲ್ಲೆಯಿಂದ ಐದು ಶಾಸಕರನ್ನು ನೀಡಿದ ನಿಮ್ಮ ಋಣವನ್ನು ತೀರಿಸಲು ಹಾಗೂ ನಿಮಗೆ ಕೃತಜ್ಞತೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇವೆ ಎಂದರು.

ಕೇಂದ್ರ ಬಿಜೆಪಿ ಸರ್ಕಾರ ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಹೇಳಿ ಇದುವರೆಗೂ ಒಂದೇ ಒಂದು ರೂಪಾಯಿ ನೀಡಿಲ್ಲ. ಕಾಂಗ್ರೆಸ್ ಪಕ್ಷದ 136 ಶಾಸಕರು, ವಿಧಾನಪರಿಷತ್ ಸದಸ್ಯರು ದೆಹಲಿಗೆ ಹೋಗಿ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೋರಾಟ ನಡೆಸಿದೆವು. ಬಿಜೆಪಿ ಮತ್ತು ಜೆಡಿಎಸ್ ಸಂಸದರು ಬಾಯಿ ತೆಗೆಯಲೇ ಇಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಬಿ.ಬಿ. ನಿಂಗಯ್ಯ, ಜಿಲ್ಲೆಯ ಶಾಸಕರುಗಳಾದ ಟಿ.ಡಿ. ರಾಜೇಗೌಡ ನಯನ ಮೋಟಮ್ಮ, ಟಿ.ಡಿ.ರಾಜೇಗೌಡ, ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ, ಅನಿವಾಸಿ ಭಾರತೀಯ ಸಂಘಟನೆಯ ಶ್ರೀಮತಿ ಆರತಿ ಕೃಷ್ಣ, ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್   ಸೇರಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ನಾಯಕರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ