October 5, 2024

ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗವನ್ನು ಮೀಸಲಿಟ್ಟು ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ  ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಿತು. ಇದರ ಭಾಗವಾಗಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್‌ನಲ್ಲಿ ಕರವೇ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್, ರಾಜ್ಯದಲ್ಲಿ ಎಲ್ಲಾ ರೀತಿಯ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಿಡಬೇಕು ಎಂದು ಡಾ. ಸರೋಜನಿ ಮಹಿಷಿ ವರದಿಯನ್ನು ಜಾರಿಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನಾ ಧರಣಿಗೆ ಕರೆ ನೀಡಿದ್ದು, ಇದರ ಭಾಗವಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು.

ಡಾ. ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಹೊರ ರಾಜ್ಯಗಳಿಂದ ಆಗಮಿಸುತ್ತಿರುವ ವಲಸಿಗರ ಹಾವಳಿಯಿಂದಾಗಿ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಕನ್ನಡಿಗರಿಗೆ ಮರೀಚಿಕೆಯಾಗಿದೆ ಎಂದು ಆರೋಪಿಸಿದರು.

ಕೈಗಾರಿಕಾ ಉದ್ಯೋಗಸ್ಥಾಯಿ ಆದೇಶ ಕಾಯ್ದೆ 1946 ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಜೊತೆಗೆ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ. 100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಒದಗಿಸುವಂತೆ ಆಗ್ರಹಿಸಿದರು.

ಎಲ್ಲಾ ಖಾಸಗಿ ಸಂಸ್ಥೆಗಳ ಇತರೆ ಹುದ್ದೆಗಳಲ್ಲಿ ಶೇ. 80 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು, 15 ವರ್ಷಗಳ ಕಾಲ ರಾಜ್ಯದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ತೇರ್ಗಡೆ ಹೊಂದಿದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕೆಂದು ಒತ್ತಾಯಿಸಿದರು.

ಈ ಸಂಬಂಧ ರಾಜ್ಯಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ವಕೀಲರ ತಂಡವನ್ನು ಸಿದ್ದಪಡಿಸಬೇಕೆಂದು ತಿಳಿಸಿದರು.

ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲಾ ಸೌಲತ್ತುಗಳನ್ನು ವಾಪಸ್ ಪಡೆಯುವ ನಿಯಮ ರೂಪಿಸಬೇಕು, ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ದಂಡ ವಸೂಲಿ ಮಾಡುವಂತೆ ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 100 ರಷ್ಟು ಉದ್ಯೋಗಗಳನ್ನು ಮೀಸಲಿರಿಸಬೇಕು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೋಟೆ ಮಲ್ಲೇಶ, ಯುವ ಘಟಕದ ಜಿಲ್ಲಾಧ್ಯಕ್ಷ ಕುಮಾರ್ ಆರ್.ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಯುವರಾಜ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರುದ್ರೇಶ್ ಸಿಂಹಾದ್ರಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ವಿನೋದ್ ಬಿದರಹಳ್ಳಿ, ಭರತ್, ಕೋಟೆ ಸೋಮಣ್ಣ, ಸಾದಿಕ್, ಅಶೋಕ್ ಕುಮಾರ್, ದಶರಥ ರಾಜ್, ಪಂಚಾಕ್ಷರಿ, ಸುಂದರೇಶ್ ಮತ್ತಿತರರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ