ವಿವಿಧ ರಾಜಕೀಯ ಪಕ್ಷದ ಅಭ್ಯರ್ಥಿಗಳು ನಿನ್ನೆ ಮೂಡಿಗೆರೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು. ಪ್ರಮುಖ ಐದು ಪಕ್ಷಗಳ ಅಭ್ಯರ್ಥಿಗಳು ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಎಚ್.ಡಿ.ರಾಜೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ, ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ,
ಜೆಡಿಎಸ್ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ, ಸಿಪಿಐ ಪಕ್ಷದ ಅಭ್ಯರ್ಥಿ ಕೆಳಗೂರು ರಮೇಶ್ ಅವರು ತಮ್ಮ ಕಾರ್ಯಕರ್ತರೊಂದಿಗೆ ಆಗಮಿಸಿ ಸಾಂಕೇತಿಕವಾಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಬಿಎಸ್ಪಿ ಅಭ್ಯರ್ಥಿ ಲೋಕವಳ್ಳಿ ರಮೇಶ್ ತಮ್ಮ ಬೆಂಬಲಿಗರೊಂದಿಗೆ ಬಿಎಸ್ಪಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಬಳಿಕ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಿನ್ನೆ ಒಂದೇ ದಿನ ಒಟ್ಟು 5 ನಾಮಪತ್ರ ಸಲ್ಲಿಕೆಯಾಗಿದೆ. ನಿನ್ನೆ ಎಲ್ಲಾ ಪಕ್ಷಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಪಟ್ಟಣದಲ್ಲಿ ಬೃಹತ್ ಮೆರವಣಿಗೆಯೊಂದಿಗೆ ತಮ್ಮ ಶಕ್ತಿ ಪ್ರದರ್ಶನ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.